Post Views: 1,098
ಪ್ರಜಾ ವೀಕ್ಷಣೆ ಸುದ್ದಿ :-
LOCAL NEWS : ಮುಂಗಾರು ಹಂಗಾಮಿನ ಪೂರ್ವಸಿದ್ಧತೆ, ದ್ವೈಮಾಸಿಕ ಕಾರ್ಯಾಗಾರ ಹಾಗೂ ವಿಕಸಿತ ಕೃಷಿ ಸಂಕಲ್ಪ ಅಭಿಯಾನ..!

‘ರೈತರಿಗೆ ಕೃಷಿ ಇಲಾಖೆಯ ಕಾರ್ಯಕ್ರಮಗಳು ಸಮರ್ಪಕವಾಗಿ ತಲುಪಲಿ’ :- ಶಾಸಕ ಕೆ.ರಾಘವೇಂದ್ರ ಹಿಟ್ನಾಳ
ಕೊಪ್ಪಳ : ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿಗೆ ಅವಶ್ಯವಿರುವ ಬಿತ್ತನೆ ಬೀಜ, ರಸಗೊಬ್ಬರದ ಜೊತೆಗೆ ರೈತರಿಗೆ ಕೃಷಿ ಇಲಾಖೆಯ ಕಾರ್ಯಕ್ರಮಗಳನ್ನು ಸಮರ್ಪಕವಾಗಿ ತಲುಪಿಸಬೇಕೆಂದು ಕೊಪ್ಪಳ ಶಾಸಕ ಕೆ.ರಾಘವೇಂದ್ರ ಹಿಟ್ನಾಳ ಹೇಳಿದರು.

ಅವರು ಶನಿವರ ಜಿಲ್ಲಾ ಪಂಚಾಯತ್ ಜೆ.ಹೆಚ್.ಪಟೇಲ್ ಸಭಾಂಗಣದಲ್ಲಿ ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ, ಗಂಗಾವತಿಯ ಕೃಷಿ ವಿಜ್ಞಾನ ಕೇಂದ್ರ ಮತ್ತು ಕೊಪ್ಪಳದ ಕೃಷಿ ತಂತ್ರಜ್ಞರ ಸಂಸ್ಥೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ 2025-26ನೇ ಸಾಲಿನ ಮುಂಗಾರು ಹಂಗಾಮಿನ ಪೂರ್ವಸಿದ್ಧತೆ, ದ್ವೈಮಾಸಿಕ ಕಾರ್ಯಾಗಾರ ಹಾಗೂ ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಉದ್ಘಾಟಿಸಿ ಅವರು ಮಾತನಾಡಿದರು.
ಈ ವರ್ಷ ಮುಂಗಾರು ಹಂಗಾಮಿನ ಸಿದ್ಧತೆ ಪೂರ್ವದಲ್ಲಿ ರಾಜ್ಯ ಸರ್ಕಾರವು ರೈತರಿಗೆ ಬೇಕಾಗಿರುವ ಬಿತ್ತನೆ ಬೀಜಗಳು, ರಸಗೊಬ್ಬರಗಳ ವ್ಯವಸ್ಥೆಯ ಜೊತೆಗೆ ಸರ್ಕಾರದ ಅನೇಕ ಯೋಜನೆಗಳು ಮತ್ತು ಕಾರ್ಯಕ್ರಮ ಬಗ್ಗೆಯೂ ಸಹ ರೈತರಿಗೆ ತಿಳಿಸುವಂತಹ ಪ್ರಯತ್ನವನ್ನು ಕೃಷಿ ಇಲಾಖೆಯ ಮೂಲಕ ಮಾಡುತ್ತಿದೆ. ನಮ್ಮ ಸರ್ಕಾರವು ಹೆಚ್ಚು ರೈತರಿಗೆ ಅನುಕೂಲವಾಗುವಂತಹ ಕಾರ್ಯಕ್ರಮಗಳನ್ನು ನೀಡಿದೆ. ಈ ಬಾರಿ ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದ್ದು, ಮುಂಗಾರು ಬಿತ್ತನೆ ಪ್ರಾರಂಭವಾಗಲಿದೆ. ಬಿತ್ತನೆ ಬೀಜ ಮತ್ತು ಗೊಬ್ಬರಕ್ಕೆ ಯಾವುದೇ ರೀತಿಯ ಸಮಸ್ಯೆಯಾಗದಂತೆ ನೋಡಿಕೊಳ್ಳಿ ಎಂದರು.

ಇತ್ತೀಚೆಗೆ ಆನೆಕಲ್ಲು ಮಳೆಯಿಂದಾಗಿ ಅನೇಕ ಭಾಗಗಳಲ್ಲಿ ಭತ್ತದ ಬೆಳೆ ನಷ್ಟವಾಗಿದ್ದು, ಇದಕ್ಕೆ ಪರಿಹಾರ ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಮುಖ್ಯಮಂತ್ರಿಗಳಿಗೆ ತಿಳಿಸಿದ್ದೇವೆ. ರೈತರು ಉತ್ತಮ ಬೆಳೆ ಬೆಳೆದಾಗ ಸರಿಯಾದ ಬೆಲೆ ಸಿಗುವುದಿಲ್ಲ ಹಾಗೂ ಉತ್ತಮ ಬೆಳೆಯಿದ್ದಾಗ ಆ ಬೆಳೆಗೆ ಸರಿಯಾದ ಬೆಲೆ ಇರುವುದಿಲ್ಲ. ಈ ಕಾರಣದಿಂದ ಸಾಲದಿಂದ ಮುಕ್ತಿಹೊಂದಲು ರೈತರಿಗೆ ಕಷ್ಟವಾಗುತ್ತದೆ. ರೈತರಿಗಾಗಿ ಸರ್ಕಾರವು ಅನೇಕ ಕಾರ್ಯಕ್ರಮಗಳನ್ನು ಕೃಷಿ ಇಲಾಖೆಯಿಂದ ಜಾರಿಗೊಳಿಸಲಾಗುತ್ತಿದೆ. ಈ ಹಿಂದೆ ನಮ್ಮ ಸರ್ಕಾರವು ಜಾರಿಗೆ ತಂದ ಕೃಷಿ ಹೊಂಡ ನಿರ್ಮಾಣ ಯೋಜನೆಯಿಂದಾಗಿ ಬಹಳಷ್ಟು ರೈತರಿಗೆ ಅನುಕೂಲವಾಗಿದೆ. ವಿಕಸಿತ ಕೃಷಿ ಸಂಕಲ್ಪ ಅಭಿಯಾನದಡಿ ಇಂದು ಮಣ್ಣು ಪರೀಕ್ಷಾ ವಾಹನಗಳನ್ನು ಉದ್ಘಾಟಿಸಲಾಗಿದ್ದು, ರೈತರು ಹೆಲ್ಪ್ ಲೈನ್‌ಗೆ ಕರೆ ಮಾಡಿದಾಗ ತ್ವರಿತಗತಿಯಲ್ಲಿ ಸ್ಪಂದನೆ ನೀಡಬೇಕು. ಇದರ ಜೊತೆಗೆ ಸ್ಥಳಕ್ಕೆ ಭೇಟಿ ನೀಡಿ, ಮಣ್ಣು ಪರೀಕ್ಷಿಸಿ, ಅಲ್ಲಿ ಯಾವ ಬೆಳೆ ಬೆಳೆಯಲು ಸೂಕ್ತವೆಂದು ರೈತರಿಗೆ ಮಾಹಿತಿ ನೀಡಬೇಕು. ಈ ಬಗ್ಗೆ ಅಧಿಕಾರಿಗಳು ಚುರುಕಾಗಿ ಕೆಲಸ ಮಾಡಬೇಕೆಂದು ಹೇಳಿದರು.
ಜಿಲ್ಲೆಯಲ್ಲಿ ನೀರಾವರಿ ಪ್ರದೇಶದಲ್ಲಿ ಹಾಗೂ ವಿಶೇಷವಾಗಿ ಭತ್ತ ಬೆಳೆಯುವ ಭಾಗಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ರಸಾಯನಿಕಗೊಬ್ಬರಗಳ ಬಳಕೆಯಾಗುತ್ತಿದ್ದು, ಇದು ಜನರ ಆರೋಗ್ಯಕ್ಕೆ ಹಾನಿಕಾರವಾಗುವ ಜೊತೆಗೆ ಭೂಮಿಯ ಫಲವತ್ತತೆಯನ್ನು ಸಹ ಹಾಳು ಮಾಡುತ್ತದೆ. ಇದಕ್ಕಾಗಿ ಸಾವಯವ ಕೃಷಿಗೆ ಹೆಚ್ಚಿನ ಅದ್ಯತೆ ನೀಡಬೇಕಿದೆ. ಈ ಬಗ್ಗೆ ಜಿಲ್ಲೆಯ ರೈತರಿಗೆ ಅರಿವು ಮೂಡಿಸಬೇಕು ಎಂದರು.
ಕೊಪ್ಪಳ ಜಿಲ್ಲಾಧಿಕಾರಿ ನಲಿನ್ ಅತುಲ್ ಅವರು ಮಾತನಾಡಿ, ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗುತ್ತಿದ್ದು, ಜಿಲ್ಲೆಯಲ್ಲಿ ಬಿತ್ತನೆ ಬೀಜ ಮತ್ತು ರಸಗೊಬ್ಬರಕ್ಕೆ ಯಾವುದೇ ಕೊರತೆಯಿಲ್ಲ. ಬೇಡಿಕೆಗಿಂತಲು ಶೇ.20 ರಷ್ಟು ಹೆಚ್ಚಿನ ಪ್ರಮಾಣದ ಬೀಜ-ಗೊಬ್ಬರವನ್ನು ದಾಸ್ತಾನು ಇರಲಿದೆ. ಬೀಜ ಮತ್ತು ರಸಗೊಬ್ಬರ ಮಾರಾಟಗಾರರು ಎಂ.ಆರ್.ಪಿ.ಗಿAತ ಹೆಚ್ಚಿನ ದರಕ್ಕೆ ಬಿತ್ತನೆ ಬೀಜ ಮತ್ತು ರಸಗೊಬ್ಬರಗಳನ್ನು ಮಾರಾಟ ಮಾಡಿರುವ ಬಗ್ಗೆ ಯಾವುದೇ ದೂರು ಬಂದಲ್ಲಿ ಅಂತಹವರ ವಿರುದ್ಧ ಕಾನೂನು ಮೂಲಕ ಕ್ರಮ ಕೈಗೊಳ್ಳಲಾಗುವುದು. ಭತ್ತ ಬೆಳೆಯುವ ಭಾಗಗಳಲ್ಲಿ ಹೆಚ್ಚಿನ ಪ್ರಮಾಣದ ರಸಾಯನಿಕಗಳ ಬಳಕೆಯನ್ನು ತಡೆಯಲು ಈಗಾಗಲೇ ಜಾಗೃತಿ ಮೂಡಿಸಲಾಗುತ್ತಿದೆ. ಜಿಲ್ಲೆಯಲ್ಲಿ ರೇಷ್ಮೆ, ತೋಟಗಾರಿಕೆ, ಪಶುಪಾಲನೆ ಪ್ರಮಾಣವನ್ನು ಹೆಚ್ಚಿಸುವುದರ ಜೊತೆಗೆ ಕೃಷಿ ಮಾರುಕಟ್ಟೆಯನ್ನು ಅಭಿವೃದ್ಧಿ ಪಡಿಸಿ, ಸಮಗ್ರ ಸಾವಯವ ಕೃಷಿಗೆ ಉತ್ತೇಜನ ನೀಡಲು ಪ್ರಯತ್ನಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ತೋಟಗಾರಿಕೆ ಕ್ಷೇತ್ರವು ಹೆಚ್ಚಾಗುತ್ತಿದೆ ಹಾಗೂ ಪ್ರಾಣಿಗಳ ಸಂಖ್ಯೆಯು ಹೆಚ್ಚಾಗಿದೆ ಎಂದು ಹೇಳಿದರು.
ಕೃಷಿಯೊಂದಿಗೆ ಕೋಳಿ, ಕುರಿ ಮತ್ತು ಧನಕರುಗಳ ಸಾಕಾಣಿಕೆ ಹಾಗೂ ತೋಟಗಾರಿಕೆ ಬೆಳೆಗಳನ್ನು ಬೆಳೆಯುವುದರಿಂದ ಮಣ್ಣಿ ಫಲವತ್ತತೆ ಉತ್ತಮವಾಗಿರುತ್ತದೆ. ಜಿಲ್ಲೆಯಲ್ಲಿ ಈ ರೀತಿಯ ಸಮಗ್ರ ಕೃಷಿ ವ್ಯವಸ್ಥೆಯನ್ನು ಜಾರಿಗೆ ಮಾಡಬೇಂದು ಯೋಜನೆಯನ್ನು ರೂಪಿಸಲಾಗಿದೆ. ಜಿಲ್ಲೆಯ ಸರಿ ಸುಮಾರು 4.50 ಲಕ್ಷ ಹೆಕ್ಟರ್ ಭೂಮಿಯಲ್ಲಿ ವ್ಯವಸಾಯ ಮಾಡಲಾಗುತ್ತಿದ್ದು, ಇದರಲ್ಲಿ 55 ಸಾವಿರ ಹೆಕ್ಟರ್ ಭೂಮಿಯನ್ನು ತೋಟಗಾರಿಕೆ ಕ್ಷೇತ್ರದಲ್ಲಿ ತೊಡಗಿಸಲಾಗಿದೆ. ಕಳೆದ ಐದು ವರ್ಷಗಳ ಹಿಂದೆ 25 ಸಾವಿರ ಹೆಕ್ಟರ್‌ಗಿಂತಲು ಕಡಿಮೆ ತೋಟಗಾರಿಕೆ ಪ್ರದೇಶವಿತ್ತು. ಮುಂಬರುವ ವರ್ಷಗಳಲ್ಲಿ 1.50 ಲಕ್ಷ ಹೆಕ್ಟರ್ ಪ್ರದೇಶವನ್ನು ತೋಟಗಾರಿಕೆಗೆ ತರಬೇಕೆಂದು ಯೋಜನೆ ರೂಪಿಸಲಾಗಿದ್ದು, ಇದರಿಂದ ರೈತರ ಆದಾಯ ಹೆಚ್ಚಾಗಲಿದೆ. ತೋಟಗಾರಿಕೆ ಟೆಕ್ ಪಾರ್ಕ್ ಹಾಗೂ ರೈಸ್ ಪಾರ್ಕ್ ಸ್ಥಾಪನೆಯಿಂದಾಗಿಯೂ ಜಿಲ್ಲೆಯ ಕೃಷಿ ಮತ್ತು ತೋಟಗಾರಿಕೆ ಕ್ಷೇತ್ರಗಳಲ್ಲಿ ಹೆಚ್ಚಿನ ಅಭಿವೃದ್ಧಿಯಾಗಲಿದೆ ಎಂದರು.
ರಾಷ್ಟ್ರ ಮಟ್ಟದ ಪ್ರಶಸ್ತಿಗಾಗಿ ಜಿಲ್ಲಾಧಿಕಾರಿಗಳಿಗೆ ಸನ್ಮಾನ: 2023-24ನೇ ಸಾಲಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯಡಿ ಕೊಪ್ಪಳ ಜಿಲ್ಲೆಗೆ ರಾಷ್ಟ್ರ ಮಟ್ಟದ ಪ್ರಶಸ್ತಿ ಲಭಿಸಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ನಲಿನ್ ಅತುಲ್ ಅವರಿಗೆ ಬೆಂಗಳೂರಿನ ಐಎಟಿ ಸಂಸ್ಥೆ, ಕೊಪ್ಪಳ ಜಿಲ್ಲಾ ಕೃಷಿಕ ಸಮಾಜ ಹಾಗೂ ಕೃಷಿ ಇಲಾಖೆಯಿಂದ ಸನ್ಮಾನಿಸಲಾಯಿತು.
ಪೋಸ್ಟರ್ ಬಿಡುಗಡೆ ಹಾಗೂ ಬಿತ್ತನೆ ಬೀಜ ವಿತರಣೆ: ಕೃಷಿ ಇಲಾಖೆಯಿಂದ ಹೊರತಂದಿರುವ ಡಿಎಪಿ ಬದಲಾಗಿ ಇತರೆ ರಸಗೊಬ್ಬರ ಬಳಕೆಯ ಮಾಹಿತಿಯ ಮತ್ತು ದೇಶಿ ತಳಿಯ ಸಂರಕ್ಷಣೆ ಕುರಿತಾದ ಮಾಹಿತಿಯ ಪೋಸ್ಟರ್‌ಗಳನ್ನು ಬಿಡುಗಡೆ ಮಾಡಲಾಯಿತು. ಇದೇ ಸಂದರ್ಭದಲ್ಲಿ ಮುಂಗಾರು ಹಂಗಾಮಿನ ಬಿತ್ತನೆ ಬೀಜಗಳನ್ನು ರೈತರಿಗೆ ಸಾಂಖೇತಿಕವಾಗಿ ವಿತರಣೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಕೊಪ್ಪಳ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ರತ್ನಂ ಪಾಂಡೇಯ, ಜಂಟಿ ಕೃಷಿ ನಿರ್ದೇಶಕರಾದ ಟಿ.ಎಸ್.ರುದ್ರೇಶಪ್ಪ, ಕೃಷಿಕ ಸಮಾಜದ ಕೊಪ್ಪಳ ಜಿಲ್ಲಾಧ್ಯಕ್ಷರಾದ ಶೇಖರಗೌಡ ಮಾಲಿ ಪಾಟೀಲ್, ಕೃಷಿಕ ಸಮಾಜದ ರಾಜ್ಯ ಪ್ರತಿನಿಧಿ ಶಿವಣ್ಣ ಮೂಲಿಮನಿ, ಬೆಂಗಳೂರಿನ ಐಎಟಿ ಕಾರ್ಯದರ್ಶಿ ವೀರಣ್ಣ ಕಂತಾರ, ಗಂಗಾವತಿಯ ಕೃಷಿ ವಿಜ್ಞಾನ ಕೇಂದ್ರ ಮುಖ್ಯಸ್ಥರಾದ ರಾಘವೇಂದ್ರ ಯಲಿಗಾರ ಹಾಗೂ ವಿಜ್ಞಾನಿಗಳು ಕೃಷಿಕ ಸಮಾಜದ ಸದಸ್ಯರು, ಮುನಿರಾಬಾದ್ ತೋಟಗಾರಿಕೆ ಮಹಾವಿದ್ಯಾಲಯದ ಅಧಿಕಾರಿಗಳು, ಕೃಷಿ ಇಲಾಖೆಯ ಜಿಲ್ಲೆಯ ಎಲ್ಲಾ ತಾಲ್ಲೂಕಿನ ಸಹಾಯಕ ನಿರ್ದೇಶಕರು ಸೇರಿದಂತೆ ಕೃಷಿ ಇಲಾಖೆಯ ಸಿಬ್ಬಂದಿ ಉಪಸ್ಥಿತರಿದ್ದರು.
ವಿಕಸಿತ ಕೃಷಿ ಸಂಕಲ್ಪ ಅಭಿಯಾನಕ್ಕೆ ಚಾಲನೆ: ಕಾರ್ಯಕ್ರಮಕ್ಕೂ ಪೂರ್ವದಲ್ಲಿ ಜಿಲ್ಲಾಡಳಿತ ಭವನದ ಆವರಣದಲ್ಲಿ ಕೃಷಿ ಇಲಾಖೆಯಿಂದ ಆಯೋಜಿಸಲಾಗಿರುವ ವಿಕಸಿತ ಕೃಷಿ ಸಂಕಲ್ಪ ಅಭಿಯಾನಕ್ಕೆ ಹಸಿರು ನಿಶಾನೆ ತೋರಿಸುವ ಮೂಲಕ ಶಾಸಕರು ಹಾಗೂ ಜಿಲ್ಲಾಧಿಕಾರಿಗಳು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಜಿ.ಪಂ ಸಿಇಓ, ಜಿಲ್ಲಾ ಕೃಷಿಕ ಸಮಾಜದವರು, ಕೃಷಿ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಸೇರಿ ಮತ್ತಿತರರಿದ್ದರು.