LOCAL NEWS : ಮೇ 9ಕ್ಕೆ ಮಾಜಿ ಸಿಎಂ ಬಿಎಸ್‌ವೈ ಅಭಿಮಾನೋತ್ಸವ! : ಕೊಪ್ಪಳ ಜಿಲ್ಲೆಯಿಂದ 30 ರಿಂದ 40 ಸಾವಿರ ಜನ ಭಾಗಿ – ನವೀನ್ ಗುಳಗಣ್ಣನವರ್
> ಕೊಪ್ಪಳ ಜಿಲ್ಲೆಯಿಂದ 30–40 ಸಾವಿರ ಜನ ಭಾಗಿ – ನವೀನ್ ಗುಳಗಣ್ಣನವರ
ಕುಕನೂರು ಮೇ 06 : ಮುತ್ಸದ್ದಿ ಹಿರಿಯ ರಾಜಕಾರಣಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ರಾಜಕೀಯ ಜೀವನದ 50ನೇ ವರ್ಷದ ಅಂಗವಾಗಿ ಮೇ 9ರಂದು ಚಿತ್ರದುರ್ಗದಲ್ಲಿ ಅದ್ದೂರಿ ಅಭಿಮಾನೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ನವೀನ್ ಗುಳಗಣ್ಣನವರ್ ತಿಳಿಸಿದ್ದಾರೆ.
ತಾಲೂಕಿನ ಇಟಗಿ ಗ್ರಾಮದ ತಮ್ಮ ಗೃಹ ಕಚೇರಿಯಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಈ ಬೃಹತ್ ಕಾರ್ಯಕ್ರಮಕ್ಕೆ ಕೊಪ್ಪಳ ಜಿಲ್ಲೆಯಿಂದ 30ರಿಂದ 40 ಸಾವಿರಕ್ಕೂ ಹೆಚ್ಚು ಬಿಎಸ್‌ವೈ ಅಭಿಮಾನಿಗಳು ಭಾಗವಹಿಸುವ ನಿರೀಕ್ಷೆಯಿದೆ” ಎಂದು ಹೇಳಿದರು.
ದಕ್ಷಿಣ ಭಾರತದಲ್ಲಿ ಬಿಜೆಪಿಗೆ ಬಲವಾದ ನೆಲೆ ಒದಗಿಸುವಲ್ಲಿ ಹಾಗೂ ರಾಜ್ಯದಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರಿಸುವಲ್ಲಿ ಯಡಿಯೂರಪ್ಪ ಅವರ ಪಾತ್ರ ಮಹತ್ವದ್ದಾಗಿದೆ. ರೈತರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿ ಪ್ರತ್ಯೇಕ ರೈತ ಬಜೆಟ್ ಮಂಡಿಸಿರುವುದು ಸೇರಿದಂತೆ ಹಲವಾರು ಕ್ರಮಗಳನ್ನು ಅವರು ಕೈಗೊಂಡಿದ್ದಾರೆ ಎಂದು ವಿವರಿಸಿದರು.
ಚಿತ್ರದುರ್ಗ ನಗರದ ಮಾದಾರ ಚೆನ್ನಯ್ಯ ಪೀಠದ ಬಳಿಯ ಆವರಣದಲ್ಲಿ ಬೃಹತ್ ಕಾರ್ಯಕ್ರಮ ನಡೆಯಲಿದೆ. ಸಾಂಸ್ಕೃತಿಕ ಕಲಾತಂಡಗಳೊಂದಿಗೆ ಮೆರವಣಿಗೆ ಹಾಗೂ ವೇದಿಕೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಯಡಿಯೂರಪ್ಪ ಅವರು ರಾಜ್ಯಕ್ಕೆ ನೀಡಿರುವ ಕೊಡುಗೆಯನ್ನು ಪರಿಗಣಿಸಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವು ರಾಷ್ಟ್ರೀಯ ಮತ್ತು ರಾಜ್ಯ ನಾಯಕರು, ಮಾಜಿ ಶಾಸಕರು ಸಚಿವರು ಹಾಗೂ ಜನಪ್ರತಿನಿಧಿಗಳು ರಾಜ್ಯದ ಎಲ್ಲಾ ಅಭಿಮಾನಿಗಳು ಭಾಗವಹಿಸಲಿದ್ದು, ಒಟ್ಟಾರೆ 10 ಲಕ್ಷಕ್ಕೂ ಹೆಚ್ಚು ಜನರು ಸೇರುವ ನಿರೀಕ್ಷೆಯಿದೆ. 1000ಕ್ಕೂ ಹೆಚ್ಚು ಮಠಾಧೀಶರು ಭಾಗವಹಿಸಲಿದ್ದಾರೆ. ಯಲಬುರ್ಗಾ ವಿಧಾನಸಭಾ ಕ್ಷೇತ್ರದಿಂದ 15 ಸಾವಿರ ಜನರನ್ನು ಕರೆದುಕೊಂಡು ಹೋಗುವ ಗುರಿ ಹೊಂದಲಾಗಿದೆ ಎಂದು ಹೇಳಿದರು.
ಕಾರ್ಯಕ್ರಮದ ದಿನ ಬೆಳಿಗ್ಗೆ 10ರಿಂದ ಸಂಜೆವರೆಗೆ ಭಾಗವಹಿಸುವ ಲಕ್ಷಾಂತರ ಜನರಿಗೆ ಊಟದ ವ್ಯವಸ್ಥೆ ಮಾಡಲಾಗಿದೆ. ಕಾರ್ಯಕರ್ತರು ಭಾಗವಹಿಸಲು ಕೊಪ್ಪಳ ಜಿಲ್ಲೆಯಿಂದ ಸುಮಾರು 200 ಬಸ್‌ಗಳು ಹಾಗೂ ಟ್ರಕ್‌ಗಳ ವ್ಯವಸ್ಥೆ ಮಾಡಲಾಗಿದೆ. ಜೊತೆಗೆ ಜಿಲ್ಲಾವಾರು ವಾಹನಗಳ ನಿಲುಗಡೆಗೆ ಪಾರ್ಕಿಂಗ್ ಸೇರಿದಂತೆ ಎಲ್ಲಾ ಮೂಲಭೂತ ವ್ಯವಸ್ಥೆ ಮಾಡಲಾಗಿದೆ ಎಂದರು.
ಬಿಜೆಪಿ ಜಿಲ್ಲಾ ವಕ್ತಾರ ಸೋಮಶೇಖರಗೌಡ ಪಾಟೀಲ್ ಅವರು ಮಾತನಾಡಿ, ‘ಕಲ್ಯಾಣ ಕರ್ನಾಟಕ ಮರುನಾಮಕರಣ, ನಂಜುಂಡಪ್ಪ ವರದಿ ಜಾರಿ, ಯಾದಗಿರಿ ಜಿಲ್ಲಾ ಘೋಷಣೆ, ವಿಮೋಚನಾ ದಿನಾಚರಣೆ ಪರಂಪರೆ ಮುಂದುವರಿಕೆ, ಪ್ರತ್ಯೇಕ ರೈತ ಬಜೆಟ್ ಮಂಡನೆ, ಕಲಬುರಗಿಯಲ್ಲಿ ಕ್ಯಾಬಿನೆಟ್ ಸಭೆ ನಡೆಸಿರುವುದು ಸೇರಿದಂತೆ ಹಲವು ಕ್ರಮಗಳ ಮೂಲಕ ಬಿ.ಎಸ್. ಯಡಿಯೂರಪ್ಪ ಅವರು ಕಲ್ಯಾಣ ಕರ್ನಾಟಕ ಭಾಗದೊಂದಿಗೆ ವಿಶೇಷ ಬಾಂಧವ್ಯ ಹೊಂದಿದ್ದಾರೆ’ ಎಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಎಸ್‍ಟಿ ಮೋರ್ಚಾ ಜಿಲ್ಲಾ ಅಧ್ಯಕ್ಷ ವಿಜಯಕುಮಾರ ತಾಳಕೇರಿ, ಬಿಜೆಪಿ ರೈತ ಮೋರ್ಚಾ ಜಿಲ್ಲಾ ಉಪಾಧ್ಯಕ್ಷ ವಿರೂಪಾಕ್ಷಪ್ಪ ಹುರುಳಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.