Post Views: 11
LOCAL NEWS : BSY ಅವರ 50 ವರ್ಷದ ಸುದೀರ್ಘ ರಾಜಕೀಯ ಪಯಣ : ನಾಳೆ ಚಿತ್ರದುರ್ಗದಲ್ಲಿ ಬಿ.ಎಸ್. ಯಡಿಯೂರಪ್ಪನವರ ಅದ್ದೂರಿ ಅಭಿಮಾನೋತ್ಸವ! : ಹಾಲಪ್ಪ ಆಚಾರ್

ಪ್ರಜಾವೀಕ್ಷಣೆ ಡಿಜಿಟಲ್ ಸುದ್ದಿ :
ಕುಕನೂರು, ಮೇ 07 : ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ 50 ವರ್ಷದ ಸುವರ್ಣ ರಾಜಕೀಯ ಪಯಣದ ಅಂಗವಾಗಿ ಮೇ 9ರಂದು ಚಿತ್ರದುರ್ಗದಲ್ಲಿ ಅದ್ದೂರಿ ಅಭಿಮಾನೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಸಚಿವ ಹಾಗೂ ಬಿಜೆಪಿ ಹಿರಿಯ ಮುಖಂಡ ಹಾಲಪ್ಪ ಆಚಾರ ಹೇಳಿದರು.
ಅವರು ತಾಲೂಕಿನ ಮಸಬಹಂಚಿನಾಳ ಗ್ರಾಮದ ತಮ್ಮ ಬಿಜೆಪಿ ಪಕ್ಷದ ಗೃಹ ಕಾರ್ಯಾಲಯದಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಯಲಬುರ್ಗಾ ವಿಧಾನಸಭಾ ಕ್ಷೇತ್ರದಿಂದ 5 ರಿಂದ 6 ಸಾವಿರಕ್ಕೂ ಹೆಚ್ಚು ಬಿಎಸ್‌ವೈ ಅಭಿಮಾನಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ” ಎಂದು ಹೇಳಿದರು.

ದಕ್ಷಿಣ ಭಾರತದಲ್ಲಿ ಬಿಜೆಪಿಗೆ ಬಲವಾದ ನೆಲೆ ಒದಗಿಸುವಲ್ಲಿ ಹಾಗೂ ರಾಜ್ಯದಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರಿಸುವಲ್ಲಿ ಯಡಿಯೂರಪ್ಪ ಅವರ ಪಾತ್ರ ಮಹತ್ವದ್ದಾಗಿದೆ. ರೈತರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿ ಪ್ರತ್ಯೇಕ ರೈತ ಬಜೆಟ್ ಮಂಡಿಸಿರುವುದು ಸೇರಿದಂತೆ ಹಲವು ಕ್ರಮಗಳನ್ನು ಅವರು ಕೈಗೊಂಡಿದ್ದಾರೆ ಎಂದು ಹೇಳಿದರು.
ಚಿತ್ರದುರ್ಗ ನಗರದ ಮಾದರ ಚೆನ್ನಯ್ಯ ಪೀಠದ ಬಳಿಯ ಆವರಣದಲ್ಲಿ ಬೃಹತ್ ಕಾರ್ಯಕ್ರಮ ನಡೆಯಲಿದೆ. ಸಾಂಸ್ಕೃತಿಕ ಕಲಾತಂಡಗಳೊಂದಿಗೆ ಮೆರವಣಿಗೆ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವು ರಾಷ್ಟ್ರೀಯ ಮತ್ತು ರಾಜ್ಯ ನಾಯಕರು, ಮಾಜಿ ಶಾಸಕರು, ಸಚಿವರು ಹಾಗೂ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ರಾಜ್ಯದ ವಿವಿಧ ಭಾಗಗಳಿಂದ ಒಟ್ಟು 10 ಲಕ್ಷಕ್ಕೂ ಹೆಚ್ಚು ಜನರು ಸೇರುವ ನಿರೀಕ್ಷೆಯಿದೆ. 1000ಕ್ಕೂ ಹೆಚ್ಚು ಮಠಾಧೀಶರು ಭಾಗವಹಿಸಲಿದ್ದು, ಅವರಿಗಾಗಿ ವಿಶೇಷ ವೇದಿಕೆ ಕೂಡ ವ್ಯವಸ್ಥೆ ಮಾಡಲಾಗಿದೆ ಎಂದರು.
ಪಕ್ಷತೀತವಾಗಿ ಎಲ್ಲಾ ಅಭಿಮಾನಿಗಳು ಪಾಲ್ಗೊಳ್ಳಬೇಕೆಂದು ಕರೆ ನೀಡಿದರು. ನಾನಾ ಕಲಾತಂಡಗಳಿಂದ ಭವ್ಯ ಮೆರವಣಿಗೆ ನಡೆಯಲಿದ್ದು, ಸಾಂಸ್ಕೃತಿಕ ಕಾರ್ಯಕ್ರಮಗಳು ಅಭಿಮಾನೋತ್ಸವದ ಮೆರುಗು ಹೆಚ್ಚಿಸಲಿವೆ ಎಂದು ಹೇಳಿದರು.
ಕಾರ್ಯಕ್ರಮದ ದಿನ ಬೆಳಿಗ್ಗೆ 10ರಿಂದ ಸಂಜೆವರೆಗೆ ಭಾಗವಹಿಸುವ ಜನರಿಗೆ ಊಟದ ವ್ಯವಸ್ಥೆ ಮಾಡಲಾಗಿದೆ. ಪ್ರತಿ ಗ್ರಾಮ ಪಂಚಾಯಿತಿಯಿಂದ ಬಸ್ ಹಾಗೂ ಟ್ರ್ಯಾಕ್ಸ್ ವ್ಯವಸ್ಥೆ ಮಾಡಲಾಗಿದ್ದು, ಜಿಲ್ಲಾವಾರು ವಾಹನ ನಿಲುಗಡೆಗೆ ಪಾರ್ಕಿಂಗ್ ಸೇರಿದಂತೆ ಅಗತ್ಯ ಮೂಲಸೌಕರ್ಯ ಕಲ್ಪಿಸಲಾಗಿದೆ ಎಂದು ಹೇಳಿದರು.
ಕಲ್ಯಾಣ ಕರ್ನಾಟಕ ಮರುನಾಮಕರಣ, ನಂಜುಂಡಪ್ಪ ವರದಿ ಜಾರಿ, ಯಾದಗಿರಿ ಜಿಲ್ಲೆ ಘೋಷಣೆ, ವಿಮೋಚನಾ ದಿನಾಚರಣೆ ಪರಂಪರೆ ಮುಂದುವರಿಕೆ, ಪ್ರತ್ಯೇಕ ರೈತ ಬಜೆಟ್ ಮಂಡನೆ ಹಾಗೂ ಕಲಬುರಗಿಯಲ್ಲಿ ಕ್ಯಾಬಿನೆಟ್ ಸಭೆ ನಡೆಸಿರುವುದು ಸೇರಿದಂತೆ ಹಲವು ಕ್ರಮಗಳ ಮೂಲಕ ಬಿ.ಎಸ್. ಯಡಿಯೂರಪ್ಪ ಅವರು ಕಲ್ಯಾಣ ಕರ್ನಾಟಕ ಭಾಗದೊಂದಿಗೆ ವಿಶೇಷ ಬಾಂಧವ್ಯ ಹೊಂದಿದ್ದಾರೆ ಎಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಮುಖಂಡರಾದ ಶಿವಕುಮಾರ್ ನಾಗಲಪುರಮಠ, ಶರಣಪ್ಪ ಬಣ್ಣದಬಾವಿ, ಸಿದ್ದಲಿಂಗಯ್ಯ ಉಳ್ಳಾಗಡ್ಡಿ, ಮಾರುತಿ ಹೊಸಮನಿ, ಬಾಲರಾಜ್ ಗಾಳಿ, ಮಾಂತೇಶ್ ಹೂಗಾರ್, ಮಂಜುನಾಥ್ ನಾಡಗೌಡ್, ಮಂಜುನಾಥ್ ಮಾಲಗಿತ್ತಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.