LOCAL NEWS : ಕೊಪ್ಪಳ | ಟ್ಯಾಂಕರ್-ಟ್ರ್ಯಾಕ್ಟರ್ ಮಧ್ಯೆ ಅಪಘಾತ ಭೀಕರ: ಘೋರ ದುರಂತ, 6 ಮಂದಿ ಸಾವು..!
ಪ್ರಜಾವೀಕ್ಷಣೆ ಡಿಜಿಟಲ್ ಸುದ್ದಿ :
ಕೊಪ್ಪಳ, ಮೇ 15 : ರಾಷ್ಟ್ರೀಯ ಹೆದ್ದಾರಿ-50ರಲ್ಲಿ ಟ್ಯಾಂಕರ್ ಲಾರಿ ಮತ್ತು ಟ್ರ್ಯಾಕ್ಟರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಆರು ಮಂದಿ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಮುನಿರಾಬಾದ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಸುಮಾರು 16 ಮಂದಿ ಪ್ರಯಾಣಿಸುತ್ತಿದ್ದ ಟ್ರ್ಯಾಕ್ಟರ್‌ಗೆ ವೇಗವಾಗಿ ಬಂದ ಟ್ಯಾಂಕರ್ ಲಾರಿ ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ಟ್ರ್ಯಾಕ್ಟರ್ ನಿಯಂತ್ರಣ ತಪ್ಪಿ ಸೇತುವೆಯಿಂದ ಕೆಳಗೆ ಪಲ್ಟಿಯಾಗಿ ಬಿದ್ದಿದೆ. ಟ್ಯಾಂಕರ್ ಲಾರಿಯೂ ಸಹ ಕೆಳಭಾಗಕ್ಕೆ ಉರುಳಿದೆ ಎಂದು ತಿಳಿದು ಬಂದಿದೆ.
ಅಪಘಾತದಲ್ಲಿ ಕೆಂಚಪ್ಪ (35), ಮಹಾಂತೇಶ್ (18), ಭರತ್ (1), ಸವಿತಾ (12), ಮಾರೇಶ್ ಹಾಗೂ ಗೌರಮ್ಮ ಮೃತಪಟ್ಟಿದ್ದಾರೆ. ಮೃತರು ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಮರ್ಲಾಯನಹಳ್ಳಿ ಹಾಗೂ ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಯಶವಂತನಗರ ನಿವಾಸಿಗಳಾಗಿದ್ದಾರೆ ಎಂದು ತಿಳಿದುಬಂದಿದೆ.
ಹತ್ತಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಪೊಲೀಸರು ಹಾಗೂ ಸ್ಥಳೀಯರು ರಕ್ಷಿಸಿ ಚಿಕಿತ್ಸೆಗಾಗಿ ಹೊಸಪೇಟೆ ಮತ್ತು ಕೊಪ್ಪಳದ ಸರ್ಕಾರಿ ಆಸ್ಪತ್ರೆಗಳಿಗೆ ದಾಖಲಿಸಿದ್ದಾರೆ. ಕೆಲವರ ಸ್ಥಿತಿ ಚಿಂತಾಜನಕವಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಆತಂಕ ವ್ಯಕ್ತವಾಗಿದೆ. ಇವರು ಹುಲಿಗೆಮ್ಮ ದೇವಸ್ಥಾನಕ್ಕೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಮುನಿರಾಬಾದ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.