You are currently viewing LOCAL NEWS : ಕೊಪ್ಪಳ | ಕಲ್ಯಾಣ ಮಂಡಳಿ ನಿಧಿ ದುರ್ಬಳಕೆ ವಿರೋಧಿಸಿ ಕಟ್ಟಡ ಕಾರ್ಮಿಕರ ಪ್ರತಿಭಟನೆ!!

LOCAL NEWS : ಕೊಪ್ಪಳ | ಕಲ್ಯಾಣ ಮಂಡಳಿ ನಿಧಿ ದುರ್ಬಳಕೆ ವಿರೋಧಿಸಿ ಕಟ್ಟಡ ಕಾರ್ಮಿಕರ ಪ್ರತಿಭಟನೆ!!

LOCAL NEWS : ಕಲ್ಯಾಣ ಮಂಡಳಿ ನಿಧಿ ದುರ್ಬಳಕೆ ವಿರೋಧಿಸಿ ಕಟ್ಟಡ ಕಾರ್ಮಿಕರ ಪ್ರತಿಭಟನೆ!!

ಪ್ರಜಾವೀಕ್ಷಣೆ ಡಿಜಿಟಲ್ ಸುದ್ದಿ : 

ಕೊಪ್ಪಳ, ಜುಲೈ 7: ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ನಿಧಿಯನ್ನು ದುರ್ಬಳಕೆ ಮಾಡಲಾಗುತ್ತಿದೆ ಎಂದು ಆರೋಪಿಸಿ, ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಸಂಯುಕ್ತ ಕಟ್ಟಡ ಕಾರ್ಮಿಕರ ಸಂಘ (ಎಐಯುಟಿಯುಸಿ) ನೇತೃತ್ವದಲ್ಲಿ ಮಂಗಳವಾರ ಕೊಪ್ಪಳ ನಗರದಲ್ಲಿ ಕಟ್ಟಡ ಕಾರ್ಮಿಕರು ಬೃಹತ್ ಪ್ರತಿಭಟನೆ ನಡೆಸಿದರು.

ಜಿಲ್ಲಾ ಆಸ್ಪತ್ರೆ ಆವರಣದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು, ಬಳಿಕ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಸಂಘದ ರಾಜ್ಯಾಧ್ಯಕ್ಷ ಎ. ದೇವದಾಸ್, ಕಟ್ಟಡ ಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಾದ ನಿಧಿಯನ್ನು ಬೇರೆ ಉದ್ದೇಶಗಳಿಗೆ ಬಳಸುವುದು ಕಾರ್ಮಿಕರ ಹಕ್ಕುಗಳಿಗೆ ಧಕ್ಕೆ ತರುವ ಕ್ರಮವಾಗಿದೆ ಎಂದು ಆರೋಪಿಸಿದರು. ಕಲ್ಯಾಣ ಮಂಡಳಿಯ ನಿಧಿಯನ್ನು ಕಾರ್ಮಿಕರ ಸಾಮಾಜಿಕ ಭದ್ರತೆ, ಆರೋಗ್ಯ, ಶಿಕ್ಷಣ ಮತ್ತು ನಿವೃತ್ತಿ ಜೀವನದ ರಕ್ಷಣೆಗೆ ಮಾತ್ರ ಬಳಸಬೇಕು ಎಂದು ಆಗ್ರಹಿಸಿದರು.

ಮೇಸನ್ ಕಿಟ್, ಸೇಫ್ಟಿ ಕಿಟ್ ಹಾಗೂ ಶೈಕ್ಷಣಿಕ ಕಿಟ್‌ಗಳ ರೂಪದಲ್ಲಿ ನೆರವು ನೀಡುವ ಬದಲು, ಆ ಮೊತ್ತವನ್ನು ನೇರವಾಗಿ ಕಾರ್ಮಿಕರ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡಬೇಕು. 2021ರ ಆದೇಶದಂತೆ ಕಾರ್ಮಿಕರ ಮಕ್ಕಳ ಶೈಕ್ಷಣಿಕ ಧನಸಹಾಯ ಯೋಜನೆಯನ್ನು ಮರುಜಾರಿಗೊಳಿಸುವುದರ ಜೊತೆಗೆ, ನೋಂದಾಯಿತ ಕಾರ್ಮಿಕರು ಹಾಗೂ ಅವರ ಕುಟುಂಬಗಳಿಗೆ ನಗದುರಹಿತ ವೈದ್ಯಕೀಯ ಚಿಕಿತ್ಸೆ ಮತ್ತು 60 ವರ್ಷ ಮೇಲ್ಪಟ್ಟ ಎಲ್ಲ ಅರ್ಹ ಕಾರ್ಮಿಕರಿಗೆ ಪಿಂಚಣಿ ಸೌಲಭ್ಯ ಕಲ್ಪಿಸಬೇಕು ಎಂದು ಒತ್ತಾಯಿಸಿದರು.

ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಶರಣು ಗಡ್ಡಿ ಮಾತನಾಡಿ, ಮಂಜೂರಾಗಿರುವ ವಿವಿಧ ಕಲ್ಯಾಣ ಯೋಜನೆಗಳ ಅನುದಾನವನ್ನು ತಕ್ಷಣ ಬಿಡುಗಡೆ ಮಾಡಬೇಕು. ಬಾಕಿ ಉಳಿದಿರುವ ಅರ್ಜಿಗಳನ್ನು ಶೀಘ್ರ ವಿಲೇವಾರಿ ಮಾಡಿ, ಸರ್ಕಾರದ ಎಲ್ಲ ಸೌಲಭ್ಯಗಳು ಅರ್ಹ ಕಾರ್ಮಿಕರಿಗೆ ತಲುಪುವಂತೆ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಪ್ರತಿಭಟನೆಯ ನಂತರ ತಾಲೂಕು ಕಾರ್ಮಿಕ ಅಧಿಕಾರಿ ಮಂಜುಳಾ ಅವರ ಮೂಲಕ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಪ್ರತಿಭಟನೆಯಲ್ಲಿ ಸುರೇಶ ದಳಪತಿ, ಕುಮಾರ್ ಡಿ., ನಾಗರಾಜ್ ಹುಲಗಿ, ಶಬ್ಬೀರ್ ಕುಲುಮಿ, ಚಂದ್ರಶೇಖರ, ಮೊದಿನ್, ಯಲ್ಲನಗೌಡ, ಯಮನೂರ, ಮುರ್ತೆಪ್ಪ, ಬಾಬು, ಶರಣಪ್ಪ, ಯಲ್ಲಪ್ಪ, ಶರೀಫ್, ಕಟ್ಟೆಪ್ಪ, ಅಂಬಣ್ಣ, ಮುಬೀನ್, ಶಂಕರ, ಗಂಗಮ್ಮ, ಹನುಮವ್ವ ಸೇರಿದಂತೆ ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ್ದ ನೂರಾರು ಕಟ್ಟಡ ಕಾರ್ಮಿಕರು ಭಾಗವಹಿಸಿದ್ದರು.

Prajavikshane

Chandru R Bhanapaur

Leave a Reply

error: Content is protected !!