FLASH NEWS : ಗಡಿಯಲ್ಲಿ ಸೈನಿಕ… ಗಡಿಯೊಳಗೆ ಆರಕ್ಷಕ; ಈ ಇಬ್ಬರಿಂದ ದೇಶಕ್ಕೆ ನೆಮ್ಮದಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
PV NEWS ಕನ್ನಡ 24×7 :
ಬೆಂಗಳೂರು, ಜು. 12: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಕಾರ್ಯಕ್ಷಮತೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮುಂಭಾಗದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯದ ವಿವಿಧ ಜಿಲ್ಲಾ ಪೊಲೀಸ್ ಘಟಕಗಳಿಗೆ 32 ಅತ್ಯಾಧುನಿಕ ಮೊಬೈಲ್ ಫೋರೆನ್ಸಿಕ್ ವ್ಯಾನ್‌ಗಳು ಹಾಗೂ 75 ಬೊಲೆರೋ ವಾಹನಗಳನ್ನು ಲೋಕಾರ್ಪಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, “ಗಡಿಯಲ್ಲಿ ಸೈನಿಕ, ಗಡಿಯೊಳಗೆ ಆರಕ್ಷಕ. ಈ ಇಬ್ಬರ ಸೇವೆಯಿಂದಲೇ ರಾಜ್ಯ ಹಾಗೂ ದೇಶದಲ್ಲಿ ಶಾಂತಿ ಮತ್ತು ನೆಮ್ಮದಿ ನೆಲೆಸಿದೆ. ಪೊಲೀಸ್ ಇಲಾಖೆಗೆ ನೀಡುತ್ತಿರುವ ಈ ವಾಹನಗಳು ಅಪರಾಧ ನಿಯಂತ್ರಣ ಮತ್ತು ತನಿಖಾ ಕಾರ್ಯಗಳಿಗೆ ಹೊಸ ಶಕ್ತಿ ತುಂಬಲಿವೆ” ಎಂದು ಹೇಳಿದರು.
ರಾಜ್ಯದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರು ನಡೆಸುತ್ತಿರುವ ಕಾರ್ಯಾಚರಣೆಯನ್ನು ಶ್ಲಾಘಿಸಿದ ಮುಖ್ಯಮಂತ್ರಿ, ಸಾವಿರಾರು ಡ್ರಗ್ ಪೆಡ್ಲರ್‌ಗಳನ್ನು ಬಂಧಿಸಿರುವುದು ಕರ್ನಾಟಕ ಪೊಲೀಸ್ ಇಲಾಖೆಯ ಮಹತ್ವದ ಸಾಧನೆ ಎಂದು ಪ್ರಶಂಸಿಸಿದರು. “ಕರ್ನಾಟಕ ಪೊಲೀಸ್ ಇಲಾಖೆಯ ಅಧಿಕಾರಿಗಳ ಸಾಮರ್ಥ್ಯವನ್ನು ಇಡೀ ದೇಶವೇ ಕೊಂಡಾಡುತ್ತಿದೆ. ನಿಮ್ಮ ನಿಷ್ಠೆ, ದಕ್ಷತೆ ಮತ್ತು ಕರ್ತವ್ಯನಿಷ್ಠೆಯಿಂದ ರಾಜ್ಯಕ್ಕೆ ಉತ್ತಮ ಹೆಸರು ಬಂದಿದೆ. ಹಗಲು-ರಾತ್ರಿ ಸೇವೆ ಸಲ್ಲಿಸುವ ನಿಮ್ಮ ಬೆನ್ನಿಗೆ ಸರ್ಕಾರ ಸದಾ ನಿಲ್ಲಲಿದೆ” ಎಂದು ಭರವಸೆ ನೀಡಿದರು.
ಪೊಲೀಸರು ಜನರ ವಿಶ್ವಾಸ ಗಳಿಸುವ ರೀತಿಯಲ್ಲಿ ಸೇವೆ ಸಲ್ಲಿಸಬೇಕು ಎಂದು ಕರೆ ನೀಡಿದ ಮುಖ್ಯಮಂತ್ರಿ, ಜಿಲ್ಲಾ ಘಟಕಗಳಿಗೆ ನೀಡಲಾಗಿರುವ ಹೊಸ ಬೊಲೆರೋ ವಾಹನಗಳು ಅಪರಾಧಿಗಳನ್ನು ಶೀಘ್ರ ಪತ್ತೆಹಚ್ಚಲು ಹಾಗೂ ಸಾರ್ವಜನಿಕರ ಸುರಕ್ಷತೆ ಹೆಚ್ಚಿಸಲು ನೆರವಾಗಲಿ ಎಂದು ಆಶಿಸಿದರು.
ರಾಜ್ಯದ ಪೊಲೀಸ್ ಇಲಾಖೆಯ ಆಧುನೀಕರಣಕ್ಕೆ ಸರ್ಕಾರ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದ್ದು, ಹೊಸ ವಾಹನಗಳು ಹಾಗೂ ಮೊಬೈಲ್ ಫೋರೆನ್ಸಿಕ್ ವ್ಯಾನ್‌ಗಳ ಸೇರ್ಪಡೆಯಿಂದ ಅಪರಾಧ ತನಿಖೆ, ವೈಜ್ಞಾನಿಕ ಸಾಕ್ಷ್ಯ ಸಂಗ್ರಹ ಮತ್ತು ಕಾನೂನು ಸುವ್ಯವಸ್ಥೆ ನಿರ್ವಹಣೆಯಲ್ಲಿ ಇನ್ನಷ್ಟು ವೇಗ ಹಾಗೂ ಪರಿಣಾಮಕಾರಿತ್ವ ನಿರೀಕ್ಷಿಸಲಾಗಿದೆ.
ಕಾರ್ಯಕ್ರಮದಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಶಾಸಕ ರಿಜ್ವಾನ್ ಅರ್ಷದ್, ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.