SPECIAL STORY : ಯಲಬುರ್ಗಾ ಶಾಸಕ ಬಸವರಾಜ ರಾಯರೆಡ್ಡಿ ಸಚಿವರಾಗಿ ಪ್ರಮಾಣ ವಚನ : ರಾಜಕೀಯ ಅನುಭವಕ್ಕೆ ದೊರೆತ ಮನ್ನಣೆ..!
PV NEWS ಕನ್ನಡ 24×7 | ಕೊಪ್ಪಳ | ಆ. 3
ಕೊಪ್ಪಳ ಜಿಲ್ಲೆಯ ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಶಾಸಕ ಬಸವರಾಜ ರಾಯರೆಡ್ಡಿ ಅವರು ಸೋಮವಾರ ರಾಜ್ಯ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಆಡಳಿತ ಹಾಗೂ ಶಾಸನಾಂಗದಲ್ಲಿ ನಾಲ್ಕು ದಶಕಗಳಿಗೂ ಅಧಿಕ ಅನುಭವ ಹೊಂದಿರುವ ಅವರಿಗೆ ಮತ್ತೊಮ್ಮೆ ಸಚಿವ ಸಂಪುಟದಲ್ಲಿ ಸ್ಥಾನ ದೊರೆತಿರುವುದು ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯಾಗಿ ಪರಿಗಣಿಸಲಾಗಿದೆ.
ಬೆಂಗಳೂರಿನ ಲೋಕಭವನ ಆವರಣದಲ್ಲಿರುವ ಗಾಜಿನಮನೆಯಲ್ಲಿ ಇಂದು ನಡೆದ ಸಚಿವರ ಪದಗ್ರಹಣ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಬಸವರಾಜ ರಾಯರೆಡ್ಡಿ ಅವರಿಗೆ ಹುದ್ದೆ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್, ಸಚಿವರು, ಶಾಸಕರು, ಸಂಸದರು ಹಾಗೂ ವಿವಿಧ ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು.
ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ಕೊಪ್ಪಳ ಜಿಲ್ಲೆ ಸೇರಿದಂತೆ ಯಲಬುರ್ಗಾ ವಿಧಾನಸಭಾ ಕ್ಷೇತ್ರದ ವಿವಿಧೆಡೆ ಕಾಂಗ್ರೆಸ್ ಕಾರ್ಯಕರ್ತರು ಸಿಹಿ ಹಂಚಿ, ಪಟಾಕಿ ಸಿಡಿಸಿ ಸಂಭ್ರಮಿಸಿದರು. ಜಿಲ್ಲೆಯ ಹಿರಿಯ ನಾಯಕನಿಗೆ ಮತ್ತೆ ಸಚಿವ ಸ್ಥಾನ ದೊರೆತಿರುವುದು ಜಿಲ್ಲೆಯ ಅಭಿವೃದ್ಧಿಗೆ ಹೊಸ ಚೈತನ್ಯ ನೀಡಲಿದೆ ಎಂದು ಕಾರ್ಯಕರ್ತರು ಹಾಗೂ ಸಾರ್ವಜನಿಕರು ಅಭಿಪ್ರಾಯಪಟ್ಟರು.
ಸುದೀರ್ಘ ರಾಜಕೀಯ ಪಯಣಕ್ಕೆ ಮತ್ತೊಂದು ಗೌರವ
ಬಸವರಾಜ ರಾಯರೆಡ್ಡಿ ಅವರು 1985ರಲ್ಲಿ ಮೊದಲ ಬಾರಿಗೆ ವಿಧಾನಸಭೆಗೆ ಆಯ್ಕೆಯಾಗಿದ್ದು, ನಂತರ 1990, 1994, 2004, 2009, 2013 ಹಾಗೂ 2023ರಲ್ಲಿ ಜನರ ವಿಶ್ವಾಸ ಗಳಿಸಿ ಒಟ್ಟು ಆರು ಬಾರಿ ಶಾಸಕರಾಗಿ ಸೇವೆ ಸಲ್ಲಿಸಿದ್ದಾರೆ. ವಿಧಾನಸಭೆಯಲ್ಲಿ ಕೃಷಿ, ನೀರಾವರಿ, ಗ್ರಾಮೀಣಾಭಿವೃದ್ಧಿ, ಶಿಕ್ಷಣ ಹಾಗೂ ರೈತರ ಸಮಸ್ಯೆಗಳ ಕುರಿತು ನಿರಂತರವಾಗಿ ಧ್ವನಿಯೆತ್ತುವ ನಾಯಕರೆಂದು ಗುರುತಿಸಿಕೊಂಡಿದ್ದಾರೆ.
ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಸೇವೆ
1996ರಿಂದ 1998ರವರೆಗೆ ಲೋಕಸಭಾ ಸದಸ್ಯರಾಗಿ ಕಾರ್ಯನಿರ್ವಹಿಸಿದ ಅವರು, ರಾಜ್ಯ ಹಾಗೂ ರಾಷ್ಟ್ರಮಟ್ಟದ ರಾಜಕೀಯದಲ್ಲೂ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. 1994–96 ಮತ್ತು 2016–18ರ ಅವಧಿಯಲ್ಲಿ ರಾಜ್ಯ ಸಚಿವರಾಗಿ ಜವಾಬ್ದಾರಿ ನಿರ್ವಹಿಸಿದ್ದು, 1989–94ರಲ್ಲಿ ವಿಧಾನಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕರಾಗಿಯೂ ಸೇವೆ ಸಲ್ಲಿಸಿದ್ದಾರೆ.
ಇದಲ್ಲದೆ, 1998–99ರಲ್ಲಿ ದೆಹಲಿಯಲ್ಲಿ ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿಯಾಗಿ ಕಾರ್ಯನಿರ್ವಹಿಸಿದ ಅನುಭವ ಹೊಂದಿರುವ ಅವರು, ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾಗಿಯೂ ಸೇವೆ ಸಲ್ಲಿಸಿದ್ದಾರೆ.
ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಕೊಡುಗೆ
2016–18ರ ಅವಧಿಯಲ್ಲಿ ಉನ್ನತ ಶಿಕ್ಷಣ ಸಚಿವರಾಗಿದ್ದ ಬಸವರಾಜ ರಾಯರೆಡ್ಡಿ ಅವರು ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಮೂಲಸೌಕರ್ಯ ವಿಸ್ತರಣೆ, ಗುಣಮಟ್ಟದ ಶಿಕ್ಷಣ, ವಿದ್ಯಾರ್ಥಿ ಕಲ್ಯಾಣ ಹಾಗೂ ಆಡಳಿತಾತ್ಮಕ ಸುಧಾರಣೆಗಳಿಗೆ ವಿಶೇಷ ಆದ್ಯತೆ ನೀಡಿ ಗಮನ ಸೆಳೆದಿದ್ದರು.
ಜಿಲ್ಲೆಯ ಅಭಿವೃದ್ಧಿಯತ್ತ ಹೊಸ ನಿರೀಕ್ಷೆ
ಮತ್ತೊಮ್ಮೆ ಸಚಿವ ಸಂಪುಟದಲ್ಲಿ ಸ್ಥಾನ ಪಡೆದಿರುವ ಹಿನ್ನೆಲೆಯಲ್ಲಿ ಕೊಪ್ಪಳ ಜಿಲ್ಲೆಯ ನೀರಾವರಿ, ಕುಡಿಯುವ ನೀರು, ರಸ್ತೆ, ಶಿಕ್ಷಣ, ಕೈಗಾರಿಕೆ ಹಾಗೂ ಉದ್ಯೋಗ ಸೃಷ್ಟಿಗೆ ಸಂಬಂಧಿಸಿದ ಯೋಜನೆಗಳಿಗೆ ಹೆಚ್ಚಿನ ವೇಗ ಸಿಗುವ ನಿರೀಕ್ಷೆ ವ್ಯಕ್ತವಾಗಿದೆ. ವಿಶೇಷವಾಗಿ ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಹಲವು ದಶಕಗಳ ಅಭಿವೃದ್ಧಿ ಕಾಮಗಾರಿಗಳಿಗೆ ಸಚಿವ ಸ್ಥಾನ ಹೊಸ ಬಲ ನೀಡಲಿದೆ ಎಂಬ ಅಭಿಪ್ರಾಯ ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ.
ಕೊಪ್ಪಳ ಜಿಲ್ಲೆಯ ರಾಜಕೀಯ ಇತಿಹಾಸದಲ್ಲಿ ಬಸವರಾಜ ರಾಯರೆಡ್ಡಿ ಅವರ ಅನುಭವ, ಆಡಳಿತ ಸಾಮರ್ಥ್ಯ ಹಾಗೂ ಜನಪರ ಕಾರ್ಯಶೈಲಿಗೆ ದೊರೆತ ಮತ್ತೊಂದು ಮನ್ನಣೆಯಾಗಿ ಈ ಸಚಿವ ಸ್ಥಾನವನ್ನು ವಿಶ್ಲೇಷಿಸಲಾಗುತ್ತಿದೆ. ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಅವರು ಹೊಸ ದಿಕ್ಕು ನೀಡುವ ವಿಶ್ವಾಸವನ್ನು ಸಾರ್ವಜನಿಕರು ವ್ಯಕ್ತಪಡಿಸಿದ್ದಾರೆ.