PV NEWS : ಕೊಪ್ಪಳ, ಗದಗ ಜಿಲ್ಲೆಗಳಲ್ಲಿ ಬರ ಪರಿಸ್ಥಿತಿ ಪರಿಶೀಲನೆಗೆ ಸಚಿವ ಬಸವರಾಜ ರಾಯರೆಡ್ಡಿ ಪ್ರವಾಸ!
PV NEWS ಕನ್ನಡ 24×7:
ಕುಕನೂರು, ಆ. 5 : ರಾಜ್ಯ ಸರ್ಕಾರದ ಸಂಪುಟ ದರ್ಜೆ ಸಚಿವ ಬಸವರಾಜ ರಾಯರೆಡ್ಡಿ ಅವರು ಆಗಸ್ಟ್ 5ರಿಂದ 8ರವರೆಗೆ ಕೊಪ್ಪಳ ಹಾಗೂ ಗದಗ ಜಿಲ್ಲೆ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡು, ಬರ ಪರಿಸ್ಥಿತಿ, ರೈತರ ಸಮಸ್ಯೆಗಳು ಹಾಗೂ ಪರಿಹಾರ ಕ್ರಮಗಳ ಕುರಿತು ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳೊಂದಿಗೆ ಸಭೆ ನಡೆಸಲಿದ್ದಾರೆ.
ಸಚಿವರು ಬುಧವಾರ ಸಂಜೆ ಬೆಂಗಳೂರಿನಿಂದ ರಸ್ತೆ ಮಾರ್ಗವಾಗಿ ಹೊಸಪೇಟೆಗೆ ತೆರಳಿ ಅಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ. ಗುರುವಾರ ಬೆಳಿಗ್ಗೆ ಕೊಪ್ಪಳ ಜಿಲ್ಲಾಧಿಕಾರಿಗಳ ನಿರೀಕ್ಷಣಾ ಮಂದಿರದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಬರ ಪರಿಸ್ಥಿತಿಯ ಕುರಿತು ಸಮಾಲೋಚನೆ ನಡೆಸಲಿದ್ದಾರೆ. ಬಳಿಕ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಲಿದ್ದು, ಮಧ್ಯಾಹ್ನ ರಾಜೂರಿನ ಶರಣ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಸಚಿವ ಶಿವರಾಜ ತಂಗಡಗಿ ಅವರೊಂದಿಗೆ ರೈತರು ಹಾಗೂ ಅಧಿಕಾರಿಗಳ ಸಭೆಯಲ್ಲಿ ಭಾಗವಹಿಸಲಿದ್ದಾರೆ.
ಅದೇ ದಿನ ಮಧ್ಯಾಹ್ನ ಕುಕನೂರಿನಲ್ಲಿ ಅಧಿಕಾರಿಗಳ ಸಭೆ ನಡೆಸಿ, ನಂತರ ಯಲಬುರ್ಗಾದಲ್ಲಿ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ.
ಶುಕ್ರವಾರ ಗದಗ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ, ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಬರ ಪರಿಸ್ಥಿತಿಗೆ ಸಂಬಂಧಿಸಿದಂತೆ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ನಂತರ ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ರೈತರೊಂದಿಗೆ ಪರಿಸ್ಥಿತಿಯ ವೀಕ್ಷಣೆ ನಡೆಸಲಿದ್ದಾರೆ. ಮುಂಡರಗಿ ತಾಲೂಕಿನಲ್ಲೂ ಅಧಿಕಾರಿಗಳ ಸಭೆ ಹಾಗೂ ರೈತರೊಂದಿಗೆ ಸಂವಾದ ನಡೆಸಿ, ಗದಗದಲ್ಲಿ ವಾಸ್ತವ್ಯ ಹೂಡಲಿದ್ದಾರೆ.
ಶನಿವಾರ ಶಿರಹಟ್ಟಿ ಹಾಗೂ ಲಕ್ಷ್ಮೇಶ್ವರ ತಾಲೂಕುಗಳಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಬರಪೀಡಿತ ಪ್ರದೇಶಗಳ ಪರಿಶೀಲನೆ ಕೈಗೊಳ್ಳಲಿದ್ದಾರೆ. ನಂತರ ರೋಣ ಮತ್ತು ಗಜೇಂದ್ರಗಡ ತಾಲೂಕುಗಳಲ್ಲೂ ಬರ ಪರಿಸ್ಥಿತಿಯನ್ನು ವೀಕ್ಷಿಸಿ ಅಧಿಕಾರಿಗಳೊಂದಿಗೆ ಚರ್ಚಿಸಲಿದ್ದು, ರಾತ್ರಿ ಧಾರವಾಡ ತಲುಪಲಿದ್ದಾರೆ.
ಪ್ರವಾಸದ ಅವಧಿಯಲ್ಲಿ ಕೊಪ್ಪಳ ಹಾಗೂ ಗದಗ ಜಿಲ್ಲೆಗಳ ವಿವಿಧ ತಾಲೂಕುಗಳಲ್ಲಿ ಮಳೆ ಕೊರತೆಯಿಂದ ಉಂಟಾಗಿರುವ ಬರ ಪರಿಸ್ಥಿತಿ, ಕುಡಿಯುವ ನೀರಿನ ಲಭ್ಯತೆ, ಕೃಷಿ ಚಟುವಟಿಕೆಗಳ ಮೇಲಿನ ಪರಿಣಾಮ, ರೈತರ ಸಂಕಷ್ಟ ಹಾಗೂ ಕೈಗೊಳ್ಳಬೇಕಾದ ಪರಿಹಾರ ಕ್ರಮಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದು ಅಗತ್ಯ ನಿರ್ದೇಶನಗಳನ್ನು ನೀಡಲಿದ್ದಾರೆ ಎಂದು ತಿಳಿದುಬಂದಿದೆ.