PV NEWS : ತಂಬಾಕು ಸೇವನೆಯ ದುಷ್ಪರಿಣಾಮದ ಕುರಿತು ವಿದ್ಯಾರ್ಥಿಗಳಿಗೆ ಅರಿವು ಅಗತ್ಯ: ರಾಮರೆಡ್ಡಪ್ಪ ಹಾಲಕೇರಿ
PV NEWS ಕನ್ನಡ 24×7:
ಕುಕನೂರು, ಆ. 22 : ತಂಬಾಕು ಸೇವನೆಯಿಂದ ಉಂಟಾಗುವ ಆರೋಗ್ಯದ ದುಷ್ಪರಿಣಾಮಗಳ ಕುರಿತು ವಿದ್ಯಾರ್ಥಿಗಳಿಗೆ ಶಾಲಾ ಹಂತದಲ್ಲಿಯೇ ಅರಿವು ಮೂಡಿಸುವುದು ಅಗತ್ಯ ಎಂದು ಇಟಗಿ ಪಿಎಂ ಶ್ರೀ ಸರ್ಕಾರಿ ಆದರ್ಶ ವಿದ್ಯಾಲಯದ ಮುಖ್ಯ ಶಿಕ್ಷಕ ರಾಮರೆಡ್ಡಪ್ಪ ಹಾಲಕೇರಿ ಹೇಳಿದರು.
ಇಟಗಿ ಗ್ರಾಮದ ಸರ್ಕಾರಿ ಆದರ್ಶ ವಿದ್ಯಾಲಯದಲ್ಲಿ ಶುಕ್ರವಾರ ಕೊಪ್ಪಳ ಜಿಲ್ಲಾ ಆಡಳಿತ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ತಂಬಾಕು ಸೇವನೆಯ ದುಷ್ಪರಿಣಾಮಗಳ ಕುರಿತ ಅರಿವು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ತಂಬಾಕು ಸೇವನೆ ಹಾಗೂ ಇತರ ದುಶ್ಚಟಗಳಿಗೆ ಯುವಜನರು ಒಳಗಾಗುವುದರಿಂದ ಆರೋಗ್ಯದ ಜತೆಗೆ ಕುಟುಂಬಗಳು ಆರ್ಥಿಕ ಸಂಕಷ್ಟಕ್ಕೂ ಸಿಲುಕುವಂತಾಗುತ್ತದೆ. ತಂಬಾಕು ಸೇವನೆಯಿಂದ ಕ್ಯಾನ್ಸರ್ ಸೇರಿದಂತೆ ಹಲವು ಗಂಭೀರ ಕಾಯಿಲೆಗಳು ಉಂಟಾಗುವ ಸಾಧ್ಯತೆ ಇದ್ದು, ಇದರಿಂದ ಸಾಕಷ್ಟು ಸಾವು–ನೋವುಗಳು ಸಂಭವಿಸುತ್ತಿವೆ. ಹೀಗಾಗಿ ಮಕ್ಕಳಲ್ಲಿ ಬಾಲ್ಯದಿಂದಲೇ ತಂಬಾಕು ಸೇವನೆಯ ಅಪಾಯಗಳ ಕುರಿತು ಜಾಗೃತಿ ಮೂಡಿಸಬೇಕು ಎಂದು ಹೇಳಿದರು.
ಶಾಲಾ ಹಂತದಲ್ಲಿ ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವುದರಿಂದ ಅವರು ತಮ್ಮ ಮನೆ ಹಾಗೂ ಸುತ್ತಮುತ್ತಲಿನವರಲ್ಲಿಯೂ ತಂಬಾಕು ಸೇವನೆಯ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.
ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳಿಗೆ ತಂಬಾಕು ಸೇವನೆಯ ದುಷ್ಪರಿಣಾಮಗಳ ಕುರಿತು ಭಾಷಣ ಸ್ಪರ್ಧೆ ಆಯೋಜಿಸಲಾಗಿತ್ತು. ಸ್ಪರ್ಧೆಯಲ್ಲಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ಆರೋಗ್ಯ ಸಲಹೆಗಾರ ಸಂಗಮೇಶ, ಸಮಾಜ ಸೇವಕಿ ಸರಸ್ವತಿ, ಶಿಕ್ಷಕರಾದ ವಿರುಪಾಕ್ಷಪ್ಪ ಮ್ಯಾಳಿ, ರಂಗಪ್ಪ ಓಲೆಕಾರ್, ಜಗದೀಶ ಅಜ್ಜಣ್ಣನವರ್, ಜಯಪ್ಪ, ಮಯೂರ್ ತಳವಾರ್, ಮುರಾರಿ ಭಜಂತ್ರಿ, ಮಂಜುನಾಥ್ ಜಗತಾಪ್ ಸೇರಿದಂತೆ ಶಿಕ್ಷಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.