PV NEWS : ಕುಕನೂರು | ಗಣೇಶ ಚತುರ್ಥಿ ಹಿನ್ನೆಲೆ: ಕುಕನೂರು ಪೊಲೀಸ್ ಠಾಣೆಯಲ್ಲಿ ಶಾಂತಿ ಸಭೆ!
ಸರ್ವಧರ್ಮ ಹಾಗೂ ವಿವಿಧ ಗ್ರಾಮಗಳ ಮುಖಂಡರೊಂದಿಗೆ ಮುಂಜಾಗೃತಾ ಸಭೆ; ಶಾಂತಿ–ಸೌಹಾರ್ದ ಕಾಪಾಡಲು ಪೊಲೀಸರ ಮನವಿ!
PV NEWS ಕನ್ನಡ 24×7:
ಕುಕನೂರು, ಸೆ. 08: ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆಯಲ್ಲಿ ಶಾಂತಿ, ಸುವ್ಯವಸ್ಥೆ ಹಾಗೂ ಸೌಹಾರ್ದಯುತ ವಾತಾವರಣ ಕಾಪಾಡುವ ಉದ್ದೇಶದಿಂದ ಕುಕನೂರು ಪೊಲೀಸ್ ಠಾಣೆಯಲ್ಲಿ ವಿವಿಧ ಜಾತಿ–ಧರ್ಮಗಳ ಮುಖಂಡರು ಹಾಗೂ ಪೊಲೀಸ್ ಠಾಣೆ ವ್ಯಾಪ್ತಿಯ ಸುತ್ತಮುತ್ತಲಿನ ಗ್ರಾಮಗಳ ಮುಖಂಡರೊಂದಿಗೆ ಮುಂಜಾಗೃತಾ ಶಾಂತಿ ಸಭೆ ನಡೆಸಲಾಯಿತು.
ಸಭೆಯಲ್ಲಿ ಗಣೇಶ ಚತುರ್ಥಿ ಆಚರಣೆಯ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶವಾಗದಂತೆ ಮುನ್ನೆಚ್ಚರಿಕೆ ವಹಿಸುವುದು, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದು ಹಾಗೂ ಎಲ್ಲ ಸಮುದಾಯಗಳ ನಡುವೆ ಪರಸ್ಪರ ಗೌರವ ಮತ್ತು ಸೌಹಾರ್ದತೆಯನ್ನು ಬೆಳೆಸುವ ಕುರಿತು ಚರ್ಚಿಸಲಾಯಿತು.
ಅನುಮತಿ ಪಡೆದೇ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಸೂಚನೆ: ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡುವ ಸಂಘ–ಸಂಸ್ಥೆಗಳು ಹಾಗೂ ಸಾರ್ವಜನಿಕರು KEB, ಅಗ್ನಿಶಾಮಕ ಇಲಾಖೆ ಹಾಗೂ ಸ್ಥಳೀಯ ಆಡಳಿತ ಮಂಡಳಿಯಿಂದ ಅಗತ್ಯ ಪರವಾನಿಗೆ ಮತ್ತು ಅನುಮತಿಗಳನ್ನು ಪಡೆದುಕೊಂಡ ನಂತರವೇ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಬೇಕು ಎಂದು ಪೊಲೀಸ್ ಇಲಾಖೆ ಸೂಚನೆ ನೀಡಿದೆ.
ಗಣೇಶ ಮೂರ್ತಿ ಪ್ರತಿಷ್ಠಾಪನೆ, ಮೆರವಣಿಗೆ, ಧ್ವನಿವರ್ಧಕ ಬಳಕೆ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸುವ ಸಂದರ್ಭದಲ್ಲಿ ಸರ್ಕಾರದ ನಿಯಮಗಳು ಮತ್ತು ಪೊಲೀಸ್ ಇಲಾಖೆಯ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಮುಖಂಡರಿಗೆ ತಿಳಿಸಲಾಯಿತು. ಯಾವುದೇ ಸಮಸ್ಯೆ ಅಥವಾ ಗೊಂದಲ ಉಂಟಾದಲ್ಲಿ ಕಾನೂನನ್ನು ಕೈಗೆತ್ತಿಕೊಳ್ಳದೆ ತಕ್ಷಣ ಪೊಲೀಸರ ಗಮನಕ್ಕೆ ತರುವಂತೆ ಮನವಿ ಮಾಡಲಾಯಿತು.
ಸಭೆಯಲ್ಲಿ ಹೆಡ್ ಕಾನ್‌ಸ್ಟೇಬಲ್ ಗುರುರಾಜ್ ಕುಲಕರ್ಣಿ, ಸರ್ವೇಶ್, ವೆಂಕಟೇಶ್ ಕಾಳಗಿ, ರವಿಶಂಕರ್ ಅಣ್ಣಿಗೇರಿ, ಅರ್ಜುನ್ ಹಾಗೂ ಮಹಿಳಾ ಪೊಲೀಸ್ ಸಿಬ್ಬಂದಿ ಹುಸೇನ್ ಭಿ ಸೇರಿದಂತೆ ಪೊಲೀಸ್ ಸಿಬ್ಬಂದಿ, ಸರ್ವಧರ್ಮ ಮುಖಂಡರು ಹಾಗೂ ವಿವಿಧ ಗ್ರಾಮಗಳ ಪ್ರಮುಖರು ಭಾಗವಹಿಸಿದ್ದರು.
ಗಣೇಶ ಚತುರ್ಥಿ ಹಬ್ಬವನ್ನು ಎಲ್ಲರೂ ಶಾಂತಿ, ಸೌಹಾರ್ದತೆ ಹಾಗೂ ಭಾವೈಕ್ಯತೆಯಿಂದ ಆಚರಿಸುವ ಮೂಲಕ ಕುಕನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಸಹಕರಿಸಬೇಕು ಎಂದು ಸಭೆಯಲ್ಲಿ ಮನವಿ ಮಾಡಲಾಯಿತು.