You are currently viewing PV NEWS ಕನ್ನಡ 24×7 : ಕುಕನೂರು | ಗ್ರಾಮೀಣ ವಿದ್ಯಾರ್ಥಿಗಳ ಪ್ರತಿಭೆ ಗುರುತಿಸಿ ತರಬೇತಿ ನೀಡಬೇಕು: ಚಂದ್ರಶೇಖರ ನುಗ್ಲಿ

PV NEWS ಕನ್ನಡ 24×7 : ಕುಕನೂರು | ಗ್ರಾಮೀಣ ವಿದ್ಯಾರ್ಥಿಗಳ ಪ್ರತಿಭೆ ಗುರುತಿಸಿ ತರಬೇತಿ ನೀಡಬೇಕು: ಚಂದ್ರಶೇಖರ ನುಗ್ಲಿ

PV NEWS ಕನ್ನಡ 24×7 : ಕುಕನೂರು | ಗ್ರಾಮೀಣ ವಿದ್ಯಾರ್ಥಿಗಳ ಪ್ರತಿಭೆ ಗುರುತಿಸಿ ತರಬೇತಿ ನೀಡಬೇಕು: ಚಂದ್ರಶೇಖರ ನುಗ್ಲಿ

ಕುಕನೂರು, ಸೆ. 8: ಗ್ರಾಮೀಣ ಭಾಗದ ವಿದ್ಯಾರ್ಥಿಗಳಲ್ಲಿರುವ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಅಗತ್ಯವಾದ ಪ್ರೋತ್ಸಾಹ, ತರಬೇತಿ ಹಾಗೂ ಸೌಲಭ್ಯಗಳನ್ನು ಒದಗಿಸಬೇಕು ಎಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಚಂದ್ರಶೇಖರ ನುಗ್ಲಿ ಹೇಳಿದರು.

ತಾಲ್ಲೂಕಿನ ಭಟಪ್ಪನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ನಡೆದ ಬಿನ್ನಾಳ–ಕುಕನೂರು ಗ್ರಾಮೀಣ ವಲಯ ಮಟ್ಟದ ಹಿರಿಯ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟಕ್ಕೆ ಜ್ಯೋತಿ ಬೆಳಗಿಸುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.

ಶಾಲಾ ಹಂತದ ಕ್ರೀಡಾಕೂಟಗಳಿಗೆ ಸರ್ಕಾರ ಹೆಚ್ಚಿನ ಅನುದಾನ ಒದಗಿಸಬೇಕು. ಅಗತ್ಯ ಸಂಖ್ಯೆಯಲ್ಲಿ ದೈಹಿಕ ಶಿಕ್ಷಕರನ್ನು ನೇಮಕ ಮಾಡಬೇಕು. ದೈಹಿಕ ಶಿಕ್ಷಕರಿಗೆ ಮುಖ್ಯ ಶಿಕ್ಷಕರ ಹುದ್ದೆಗೆ ಬಡ್ತಿ ನೀಡುವ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.

ಕ್ರೀಡಾಕೂಟಗಳು ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಯನ್ನು ಹೊರತರುವುದರ ಜತೆಗೆ ನಾಯಕತ್ವ ಗುಣ, ದೈಹಿಕ ಸಾಮರ್ಥ್ಯ ಹಾಗೂ ಮಾನಸಿಕ ಸ್ಥೈರ್ಯವನ್ನು ಬೆಳೆಸಲು ಸಹಕಾರಿಯಾಗುತ್ತವೆ. ಗ್ರಾಮೀಣ ವಿದ್ಯಾರ್ಥಿಗಳಿಗೆ ಸೂಕ್ತ ಮಾರ್ಗದರ್ಶನ ಹಾಗೂ ತರಬೇತಿ ದೊರೆತರೆ ಅವರು ಉತ್ತಮ ಕ್ರೀಡಾಪಟುಗಳಾಗಿ ರೂಪುಗೊಳ್ಳಬಹುದು ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಕೊಪ್ಪಳ, ಶಾಲಾ ಶಿಕ್ಷಣ ಇಲಾಖೆ ಹಾಗೂ ಯಲಬುರ್ಗಾ ಕ್ಷೇತ್ರ ಶಿಕ್ಷಣಾಧಿಕಾರಿ ಮತ್ತು ಸಮನ್ವಯಾಧಿಕಾರಿಗಳ ಕಾರ್ಯಾಲಯದ ಸಂಯುಕ್ತ ಆಶ್ರಯದಲ್ಲಿ ಕ್ರೀಡಾಕೂಟ ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಫಕೀರಪ್ಪ ಕೋಸುಂಬೆ, ಮಹೇಶ ಸಬರದ್, ರಾಯಪ್ಪ ವಾಲಿಕಾರ್, ಮಾರುತಿ ತಳವಾರ, ಶರಣಗೌಡ ಪಾಟೀಲ, ಡಾ. ಎಚ್.ಡಿ. ಪಾಟೀಲ, ಪೀರ್‌ಸಾಬ್ ದಫೇದಾರ್, ಹನುಮಂತಪ್ಪ ಸೇರಿದಂತೆ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಕ್ರೀಡಾಪಟುಗಳು ಭಾಗವಹಿಸಿದ್ದರು.

Prajavikshane

Chandru R Bhanapaur

Leave a Reply

error: Content is protected !!