PV NEWS : ಸರ್ಕಾರಿ ಯೋಜನೆಗಳ ಮಾಹಿತಿ ಜನಸಾಮಾನ್ಯರಿಗೆ ತಲುಪಿಸಲು ಡಿಜಿಟಲ್ ಮಾಧ್ಯಮ ಬಳಕೆಗೆ ಒತ್ತು..!

ವಾರ್ತಾ ಇಲಾಖೆ ಅಧಿಕಾರಿಗಳಿಗೆ ವಿಶೇಷ ತರಬೇತಿ, ಗ್ರಾಮೀಣ ಪ್ರದೇಶಗಳಲ್ಲಿ ಕಡಿಮೆ ವೆಚ್ಚದ ಚಿತ್ರಮಂದಿರಗಳಿಗೆ ಉತ್ತೇಜನ: ಕೇಂದ್ರ ಕಾರ್ಯದರ್ಶಿ ಚಂಚಲ್ ಕುಮಾರ್
PV NEWS ಕನ್ನಡ 24×7 |
ಬೆಂಗಳೂರು, ಅ 31 : ಕೇಂದ್ರ ಸರ್ಕಾರದ ವಿವಿಧ ಕಲ್ಯಾಣ ಯೋಜನೆಗಳು ಹಾಗೂ ಜನಪರ ಕಾರ್ಯಕ್ರಮಗಳ ಮಾಹಿತಿಯನ್ನು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪಿಸುವ ನಿಟ್ಟಿನಲ್ಲಿ ಡಿಜಿಟಲ್ ಮಾಧ್ಯಮಗಳ ಬಳಕೆಯನ್ನು ಗರಿಷ್ಠ ಪ್ರಮಾಣದಲ್ಲಿ ಹೆಚ್ಚಿಸಬೇಕು ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಕಾರ್ಯದರ್ಶಿ ಚಂಚಲ್ ಕುಮಾರ್ ಅವರು ಕರೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿವಿಧ ಮಾಧ್ಯಮ ಘಟಕಗಳ ಮುಖ್ಯಸ್ಥರೊಂದಿಗೆ ನಡೆಸಿದ ಸಭೆಯಲ್ಲಿ ಅವರು ಈ ಅಭಿಪ್ರಾಯ ವ್ಯಕ್ತಪಡಿಸಿದರು. ಸರ್ಕಾರದ ಯೋಜನೆಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದರ ಜೊತೆಗೆ, ಅಧಿಕೃತ ಮತ್ತು ನಿಖರ ಮಾಹಿತಿಯನ್ನು ಪರಿಣಾಮಕಾರಿಯಾಗಿ ತಲುಪಿಸಲು ಆಧುನಿಕ ಸಂವಹನ ತಂತ್ರಜ್ಞಾನಗಳನ್ನು ಸಮರ್ಥವಾಗಿ ಬಳಸಿಕೊಳ್ಳುವ ಅಗತ್ಯವನ್ನು ಅವರು ಒತ್ತಿಹೇಳಿದರು.
