PV NEWS : ಕುಕನೂರು | ಕನ್ನಡ ಭಾಷೆ, ಸಂಸ್ಕೃತಿಯ ಉಳಿವು ಪ್ರತಿಯೊಬ್ಬ ಕನ್ನಡಿಗನ ಜವಾಬ್ದಾರಿ: ಪಿಎಸ್ಐ ಮೌನೇಶ ರಾಠೋಡ
ಕುಕನೂರಿನಲ್ಲಿ 71ನೇ ಕನ್ನಡ ರಾಜ್ಯೋತ್ಸವ ಆಚರಣೆ; ಕನ್ನಡ ನಾಡಿನ ಇತಿಹಾಸ, ವಿಜಯನಗರ ಸಾಮ್ರಾಜ್ಯದ ವೈಭವ ಸ್ಮರಣೆ!
PV NEWS ಕನ್ನಡ 24×7 |
ಕುಕನೂರು, ನ. 1: ಕನ್ನಡ ಭಾಷೆ, ನಾಡು-ನುಡಿ ಹಾಗೂ ಸಂಸ್ಕೃತಿಯನ್ನು ಉಳಿಸಿ ಬೆಳೆಸುವುದು ಪ್ರತಿಯೊಬ್ಬ ಕನ್ನಡಿಗನ ಕರ್ತವ್ಯ. ಮಾತೃಭಾಷೆಯ ಬಗ್ಗೆ ಅಭಿಮಾನ ಬೆಳೆಸಿಕೊಂಡು ಕನ್ನಡದ ಶ್ರೀಮಂತ ಪರಂಪರೆಯನ್ನು ಮುಂದಿನ ಪೀಳಿಗೆಗೆ ಪರಿಚಯಿಸಬೇಕು ಎಂದು ಕುಕನೂರು ಪೊಲೀಸ್ ಠಾಣೆಯ ಪಿಎಸ್ಐ ಮೌನೇಶ ರಾಠೋಡ ಹೇಳಿದರು.
ಪಟ್ಟಣದ ತಹಶೀಲ್ದಾರ್ ಕಾರ್ಯಾಲಯದ ಮುಂಭಾಗದಲ್ಲಿ ಭಾನುವಾರ ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ ಹಾಗೂ ಪಟ್ಟಣ ಪಂಚಾಯಿತಿ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ 71ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಕನ್ನಡ ನಾಡಿನ ಏಕೀಕರಣಕ್ಕಾಗಿ ಶ್ರಮಿಸಿದ ಆಲೂರು ವೆಂಕಟರಾಯರು ಸೇರಿದಂತೆ ಮಹನೀಯರ ಕೊಡುಗೆಯನ್ನು ಸ್ಮರಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದರು.
ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಬೆಟ್ಟದೇಶ್ ಮಾಳೆಕೊಪ್ಪ ಮಾತನಾಡಿ, ಕದಂಬರು, ರಾಷ್ಟ್ರಕೂಟರು, ಚಾಲುಕ್ಯರು ಹಾಗೂ ವಿಜಯನಗರ ಸಾಮ್ರಾಜ್ಯದ ಇತಿಹಾಸ ಕನ್ನಡಿಗರ ಹೆಮ್ಮೆಯಾಗಿದೆ. 1336ರಲ್ಲಿ ಸ್ಥಾಪನೆಯಾದ ವಿಜಯನಗರ ಸಾಮ್ರಾಜ್ಯದ ವೈಭವವನ್ನು ವಿದೇಶಿ ಪ್ರವಾಸಿಗರು ಹಾಗೂ ಪರ್ಷಿಯನ್ ಬರಹಗಾರರೂ ದಾಖಲಿಸಿದ್ದಾರೆ. ಇಂತಹ ಶ್ರೀಮಂತ ಇತಿಹಾಸವನ್ನು ಯುವಜನರು ಅಧ್ಯಯನ ಮಾಡಬೇಕು ಎಂದು ಹೇಳಿದರು.
ತಹಶೀಲ್ದಾರ್ ಬಸವರಾಜ ಬೆಣ್ಣೆಶಿರೂರು ಮಾತನಾಡಿ, ಕನ್ನಡ ಭಾಷೆಯ ಉಳಿವು ಮತ್ತು ಬೆಳವಣಿಗೆಯಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ. ಮಕ್ಕಳು ಇತರ ಭಾಷೆಗಳ ಕಲಿಕೆಯ ಜೊತೆಗೆ ಕನ್ನಡ ಪುಸ್ತಕಗಳನ್ನು ಓದುವ ಅಭ್ಯಾಸ ಬೆಳೆಸಿಕೊಳ್ಳಬೇಕು. ಶಾಲೆಗಳಲ್ಲಿ ಕನ್ನಡ ಭಾಷೆ ಮತ್ತು ಸಂಸ್ಕೃತಿಯ ಬಗ್ಗೆ ನಿರಂತರ ಅರಿವು ಮೂಡಿಸಬೇಕು ಎಂದರು.
ಗವಿಸಿದ್ದೇಶ್ವರ ಪ್ರೌಢಶಾಲೆಯ ಕನ್ನಡ ಶಿಕ್ಷಕ ಶರಣಪ್ಪ ಗುಡ್ಲಾನೂರು ವಿಶೇಷ ಉಪನ್ಯಾಸ ನೀಡಿದರು. ಕನ್ನಡ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಘಟಕದ ಅಧ್ಯಕ್ಷ ಕಳಕಪ್ಪ ಕುಂಬಾರ ಮಾತನಾಡಿದರು.
ಕಾರ್ಯಕ್ರಮದಲ್ಲಿ ಮಂಗಳೂರಿನ ಉಪತಹಶೀಲ್ದಾರ್ ಪಿ.ಕೆ. ಬಸವರಾಜ, ಶಿರಸ್ತೇದಾರ್ ಮುಸ್ತಫ, ಸಮಾಜ ಕಲ್ಯಾಣ ಇಲಾಖೆಯ ವಿಜಯಕುಮಾರ, ಉಪಖಜಾನೆ ಅಧಿಕಾರಿ ಶರಣಯ್ಯ ಸರಗಣಾಚಾರ, ಬಸವರಾಜ ಪತ್ತಾರ, ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಜಿಲ್ಲಾಧ್ಯಕ್ಷ ರವಿತೇಜ ಅಬ್ಬಿಗೇರಿ, ಕಾ.ನಿ.ಪ ಧ್ವನಿ ಸಂಘದ ಅಧ್ಯಕ್ಷ ಚಂದ್ರು ಆರ್. ಭಾನಾಪುರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಶಿಕ್ಷಕರು, ಮಾಧ್ಯಮ ಪ್ರತಿನಿಧಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಪೀರ್ಸಾಬ್ ದಫೇದಾರ್ ಮತ್ತು ಎಸ್.ಎಂ. ಹಿರೇಮಠ ನಿರೂಪಿಸಿದರು. ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಕಾರ್ಯಕ್ರಮದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಅಭಿನಂದನಾ ಪತ್ರ ವಿತರಿಸಿ ಗೌರವಿಸಲಾಯಿತು.