ಬೆಂಗಳೂರು : ಮುದಿಂನ ತಿಂಗಳು ಜುಲೈ 1ರಿಂದ 7ರವರೆಗೆ ರಾಜ್ಯದಾದ್ಯಂತ ವನಮಹೋತ್ಸವ ಆಚರಿಸಲಾಗುತ್ತಿದ್ದು, ಈ ಅವಧಿಯಲ್ಲಿ ಬರೋಬ್ಬರಿ 1 ಕೋಟಿ ಸಸಿ ನೆಡಲು ತೀರ್ಮಾನಿಸಲಾಗಿದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.
ಇಂದು ವಿಧಾನಸೌಧದಲ್ಲಿ ಅರಣ್ಯ ಇಲಾಖೆಯ ಲಾಂಛನ ಬಿಡುಗಡೆ ಮಾಡಿ ಮಾತನಾಡಿದ ಅವರು, ಈ ವರ್ಷ 5 ಕೋಟಿ ಸಸಿ ನೆಟ್ಟು ಪೋಷಿಸಲಾಗುವುದು. ಅರಣ್ಯನಾಶ ಮತ್ತು ವನ್ಯ ಮೃಗಗಳ ಸಾವು, ಮಾನವ-ಮೃಗ ಸಂಘರ್ಷದ ವಿಚಾರ ಬಹಳ ಗಂಭೀರವಾದ್ದು. ಈ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ತಿಳಿಸಲಾಗಿದೆ.
ಈ ವೇಳೆ ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸಲಾಗುತ್ತದೆ. ಕಳೆದ ಒಂದು ತಿಂಗಳಲ್ಲಿ ನೀವು ಅದನ್ನು ನೋಡಿದ್ದೀರಿ ಎಂದು ಸಚಿವ ಖಂಡ್ರೆ ಹೇಳಿದರು.
ಅರಣ್ಯಕ್ಕೆ ಎದುರಾಗುವ ಪ್ರಮುಖ ಆಪತ್ತು ಆದ ಕಾಡ್ಗಿಚ್ಚು. ಈ ಕಾಡ್ಗಿಚ್ಚು ಉದ್ದೇಶಪೂರ್ವಕವಾದ್ದೋ, ಸ್ವಾಭಾವಿಕವಾದ್ದೋ ಎಂಬುದು ಮುಖ್ಯವಾಗುತ್ತದೆ. ಕೆಲವೆಡೆ ಮರ ಕಡಿದು ಬುಡಕ್ಕೆ ಬೆಂಕಿ ಹಚ್ಚಿ, ಜೆಸಿಬಿಯಿಂದ ಭೂಮಿ ಮಟ್ಟ ಮಾಡಿ ಅರಣ್ಯ ಭೂಮಿ ಕಬಳಿಸಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಕಟ್ಟೆಚ್ಚರ ವಹಿಸುವಂತೆ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಲಾಗಿದೆ ಎಂದರು.
ಮಾನವ ಹಾಗೂ ಕಾಡು ಮೃಗಗಳ ನಡುವಿನ ಸಂಘರ್ಷ ಕೂಡ ಬಹು ದೊಡ್ಡ ಸವಾಲಾಗಿ ಪರಿಣಮಿಸಿದೆ. ನಮ್ಮ ರಾಜ್ಯದಲ್ಲಿ 2022-23ನೇ ಸಾಲಿನಲ್ಲಿ ವನ್ಯಮೃಗ ದಾಳಿಯಿಂದ 51 ಜನ ಸಾವು ಸಂಭವಿಸಿದ್ದು, ಇದರಲ್ಲಿ 29 ಸಾವು ಆನೆಗಳಿಂದಲೇ ಆಗಿದೆ ಎಂದು ನನಗೆ ಮಾಹಿತಿ ಇದೆ. ರಾಜ್ಯದಲ್ಲಿ ಸುಮಾರು 6030 ಆನೆ ಇದೆ ಎಂದು ಅಂದಾಜು ಮಾಡಲಾಗಿದೆ. ಮನುಷ್ಯರ ಜೀವ ಅಮೂಲ್ಯವಾಗಿದ್ದು, ಅದೇ ರೀತಿಯಲ್ಲಿ ಪ್ರಾಣಿಗಳ ಜೀವವೂ ಕೂಡ. ಅರಣ್ಯ ಇಲಾಖೆ ಜನರಪರ ಕಾಳಜಿಯಿಂದ ಕರ್ತವ್ಯ ನಿರ್ವಹಿಸಬೇಕು ಎಂದರು.