ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಮುಂಜಾಗ್ರತ ಕ್ರಮವಾಗಿ ರಾಜ್ಯದ ಕೆಲವು ಜಿಲ್ಲೆಗಳ ಜಿಲ್ಲಾಧಿಕಾರಿಗಳು ಶಾಲಾ ಕಾಲೇಜುಗಳಿಗೆ ರಜೆ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಕೊಡಗು ಜಿಲ್ಲೆಯಾದ್ಯಂತ ವರುಣನ ಅಬ್ಬರ ಜೋರಾಗಿದ್ದು, ಈ ಹಿನ್ನೆಲೆಯಲ್ಲಿ ನಾಳೆ ಕೊಡಗು ಜಿಲ್ಲೆಯ ಅಂಗನವಾಡಿ ಸೇರಿದಂತೆ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಿ ಕೊಡಗು ಜಿಲ್ಲಾಧಿಕಾರಿ ವೆಂಕಟರಾಜಾ ಅವರು ಆದೇಶ ಹೊರಡಿಸಿದ್ದಾರೆ.
ಅದರಂತೆ ಶಿವಮೊಗ್ಗ ಜಿಲ್ಲೆಯಲ್ಲಿ ನಿನ್ನೆಯಿಂದ ನಿರಂತರ ಮಳೆ ಸುರಿಯುತ್ತಿದ್ದು, ಇಂದು ಕೂಡ ಮಳೆ ಹೆಚ್ಚಾಗಿದ್ದು, ಜನರು ಮನೆಯಿಂದ ಹೊರ ಬರಲಾಗದಂತೆ ಸುಳಿ ಗಾಳಿ ಸಹಿತ ಭಾರೀ ಮಳೆಯಾಗುತ್ತಿದೆ. ಈ ಹಿನ್ನಲೆ ನಾಳೆ ಶಿವಮೊಗ್ಗ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಿಸಿದ್ದು, ಬೆಳಗಾವಿ ಜಿಲ್ಲೆಯ 3 ತಾಲೂಕುಗಳಿಗೆ ನಾಳೆ ರಜೆ ನೀಡಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಆದೇಶ ಹೊರಡಿಸಿದ್ದಾರೆ.
ವರದಿ : ಚಂದ್ರು ಆರ್ ಭಾನಾಪೂರ್